⚡ಟ್ರೆಂಡಿಂಗ್ಸ್

ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ ಬಿಜೆಪಿ ಸರ್ಕಾರ : ಅಶೋಕ ಮಂದಾಲಿ ಆರೋಪ

ಪ್ರಜಾಪ್ರಭುತ್ವದ ಮೇಲೆ ದಾಳಿ ನಡೆಸುತ್ತಿದೆ ಬಿಜೆಪಿ ಸರ್ಕಾರ : ಅಶೋಕ ಮಂದಾಲಿ ಆರೋಪ

ಗದಗ, ಮೇ. ೧೯ : ಚುನಾವಣೆಗಳಲ್ಲಿ ಗೆಲುವು ಸಾಧಿಸಲು ಕೇಂದ್ರ ಬಿಜೆಪಿ ಸರ್ಕಾರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯನ್ನು ರಾಜಕೀಯ ಆಯುಧವಾಗಿ ಬಳಸುತ್ತಿದೆ ಎಂದು ಗದಗ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷರು ಹಾಗೂ ಗದಗ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಅಶೋಕ ಮಂದಾಲಿ ಆರೋಪಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ದೇಶದ ವಿವಿಧ ರಾಜ್ಯಗಳಲ್ಲಿ ವಿರೋಧ ಪಕ್ಷಗಳ ಮತದಾರರನ್ನು ಗುರಿಯಾಗಿಸಿಕೊಂಡು ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಡುವ ಮೂಲಕ ಪ್ರಜಾಪ್ರಭುತ್ವದ ಮೂಲ ಆತ್ಮಕ್ಕೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ.

೨೦೧೪ರಲ್ಲಿ ಕೆಲವೇ ರಾಜ್ಯಗಳಲ್ಲಿ ಅಧಿಕಾರದಲ್ಲಿದ್ದ ರಾಷ್ಟ್ರೀಯ ಜನತಾಂತ್ರಿಕ ಮೈತ್ರಿಕೂಟ, ಬಳಿಕ ಚುನಾವಣೆಗಳಲ್ಲಿ ಅಕ್ರಮ ತಂತ್ರಗಳನ್ನು ಬಳಸಿಕೊಂಡು ಅನೇಕ ರಾಜ್ಯಗಳಲ್ಲಿ ಅಧಿಕಾರಕ್ಕೆ ಬಂದಿದೆ ಎಂದು ಆರೋಪಿಸಿದ ಅವರು, ವಿದ್ಯುನ್ಮಾನ ಮತಯಂತ್ರ ದುರುಪಯೋಗ, ಮತದಾರರ ಪಟ್ಟಿಯಿಂದ ಹೆಸರು ಕೈಬಿಡುವುದು ಹಾಗೂ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯ ದುರ್ಬಳಕೆ ಮೂಲಕ ಬಿಜೆಪಿ ತನ್ನ ರಾಜಕೀಯ ಲಾಭ ಸಾಧಿಸುತ್ತಿದೆ ಎಂದು ಹೇಳಿದ್ದಾರೆ.

೨೦೨೪ರಿಂದ ನಡೆದ ವಿವಿಧ ವಿಧಾನಸಭೆ ಚುನಾವಣೆಗಳಲ್ಲಿ ಕೋಟ್ಯಂತರ ಮತದಾರರ ಹೆಸರುಗಳನ್ನು ಪಟ್ಟಿಯಿಂದ ತೆಗೆದು ಹಾಕಲಾಗಿದೆ ಎಂಬ ಅಂಕಿಅಂಶಗಳನ್ನು ಉಲ್ಲೇಖಿಸಿದ ಅವರು, ಬಿಹಾರ, ದೆಹಲಿ, ಮಹಾರಾಷ್ಟ್ರ, ಹರಿಯಾಣ, ಪಶ್ಚಿಮ ಬಂಗಾಳ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತದಾರರ ಕಡಿತ ನಡೆದಿರುವುದು ಆತಂಕಕಾರಿ ಬೆಳವಣಿಗೆ ಎಂದು ತಿಳಿಸಿದ್ದಾರೆ.

ವಿರೋಧ ಪಕ್ಷಗಳ ಪ್ರಮುಖ ನಾಯಕರ ಕ್ಷೇತ್ರಗಳಲ್ಲಿಯೇ ಸಾವಿರಾರು ಮತದಾರರ ಹೆಸರುಗಳನ್ನು ಕೈಬಿಡಲಾಗಿದೆ ಎಂಬ ಆರೋಪ ಕೇಳಿಬರುತ್ತಿದ್ದು, ಇದರಿಂದ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಲಾಗಿದೆ ಎಂದು ಅವರು ದೂರಿದ್ದಾರೆ.

ಚುನಾವಣಾ ಆಯೋಗವು ಸಂಪೂರ್ಣ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಬೇಕಾಗಿದ್ದು, ಮತದಾರರ ಪಟ್ಟಿಯಿಂದ ಕೈಬಿಡಲಾದ ಹೆಸರುಗಳ ಬಗ್ಗೆ ಸಾರ್ವಜನಿಕ ಮಾಹಿತಿ ನೀಡಬೇಕು. ಇಲ್ಲದಿದ್ದರೆ ದೇಶದ ಜನರಲ್ಲಿ ಚುನಾವಣಾ ವ್ಯವಸ್ಥೆಯ ಮೇಲಿನ ನಂಬಿಕೆ ಕುಸಿಯುವ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.

ಮತದಾನದ ಹಕ್ಕು ಭಾರತೀಯ ಪ್ರಜಾಪ್ರಭುತ್ವದ ಮೂಲ ಅಸ್ತ್ರವಾಗಿದ್ದು, ಅದನ್ನು ಕಸಿದುಕೊಳ್ಳುವ ಯಾವುದೇ ಪ್ರಯತ್ನವನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ಖಂಡಿಸುತ್ತದೆ. ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವ ಉಳಿಸಲು ಜನತೆ ಜಾಗೃತರಾಗಬೇಕು ಎಂದು ಅಶೋಕ ಮಂದಾಲಿ ಕರೆ ನೀಡಿದ್ದಾರೆ.

Post a Comment

أحدث أقدم
Loading...

Breaking News

ಭ್ರಷ್ಟರ ಬೇಟೆ
ಜಿಲ್ಲಾ ಸುದ್ದಿ is loading...