⚡ಟ್ರೆಂಡಿಂಗ್ಸ್

ಅಲ್ಪಸಂಖ್ಯಾತ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ನ್ಯಾಯಯುತ ಪ್ರಾತಿನಿಧ್ಯ ನೀಡಿ: ಇಮಾಮಸಾಬ ಮೊರಬದ ಆಗ್ರಹ

ಅಲ್ಪಸಂಖ್ಯಾತ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ನ್ಯಾಯಯುತ ಪ್ರಾತಿನಿಧ್ಯ ನೀಡಿ: ಇಮಾಮಸಾಬ ಮೊರಬದ ಆಗ್ರಹ

ಗದಗವಾಣಿ ಸುದ್ದಿಮೂಲ

ಗದಗ ಜಿಲ್ಲೆ, ಜೂನ್ 10: ಕರ್ನಾಟಕ ರಾಜ್ಯ ಸಚಿವ ಸಂಪುಟದಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ ನ್ಯಾಯಯುತ ಹಾಗೂ ಸಮರ್ಪಕ ಪ್ರಾತಿನಿಧ್ಯ ನೀಡಬೇಕು. ಅಲ್ಲದೆ ಹಿರಿಯ ನಾಯಕ ಹಾಗೂ ಪ್ರಭಾವಿ ಶಾಸಕರಾದ ಜಮೀರ್ ಅಹ್ಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಹುದ್ದೆ ನೀಡುವ ಮೂಲಕ ಸಮುದಾಯದ ಆಶೋತ್ತರಗಳಿಗೆ ಗೌರವ ಸಲ್ಲಿಸಬೇಕು ಎಂದು ಕ್ರಾಂತಿಸೂರ್ಯ ಜೈಭೀಮ್ ಸೇನೆ ಅಲ್ಪಸಂಖ್ಯಾತರ ಘಟಕದ ರಾಜ್ಯಾಧ್ಯಕ್ಷರಾದ ಇಮಾಮಸಾಬ ಮೊರಬದ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷವು ಎಲ್ಲಾ ವರ್ಗಗಳು, ಜಾತಿಗಳು ಹಾಗೂ ಸಮುದಾಯಗಳನ್ನು ಒಗ್ಗೂಡಿಸಿಕೊಂಡು ಸಾಗುತ್ತಿರುವ ಪಕ್ಷವಾಗಿದ್ದು, ಅಲ್ಪಸಂಖ್ಯಾತ ಸಮುದಾಯವು ಪಕ್ಷದ ಬೆಳವಣಿಗೆ, ಸಂಘಟನೆ ಬಲವರ್ಧನೆ ಮತ್ತು ಚುನಾವಣಾ ಗೆಲುವುಗಳಲ್ಲಿ ಮಹತ್ವದ ಪಾತ್ರ ವಹಿಸಿದೆ ಎಂದು ತಿಳಿಸಿದ್ದಾರೆ.

ರಾಜ್ಯದ ಸಾಮಾಜಿಕ ನ್ಯಾಯದ ಪರಿಕಲ್ಪನೆಯನ್ನು ಬಲಪಡಿಸುವ ನಿಟ್ಟಿನಲ್ಲಿ ಸಚಿವ ಸಂಪುಟದಲ್ಲಿ ಎಲ್ಲಾ ಸಮುದಾಯಗಳಿಗೆ ಸಮಾನ ಅವಕಾಶ ಕಲ್ಪಿಸುವುದು ಅಗತ್ಯವಾಗಿದೆ. ಅದರಲ್ಲೂ ಅಲ್ಪಸಂಖ್ಯಾತ ಸಮುದಾಯದ ಜನಪ್ರತಿನಿಧಿಗಳು ಹಾಗೂ ನಾಯಕರು ರಾಜ್ಯದ ಅಭಿವೃದ್ಧಿ, ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕ ಸೌಹಾರ್ದತೆಯ ಕ್ಷೇತ್ರಗಳಲ್ಲಿ ನೀಡಿರುವ ಕೊಡುಗೆಯನ್ನು ಪರಿಗಣಿಸಿ ಸೂಕ್ತ ಸ್ಥಾನಮಾನ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರಸ್ತುತ ಸಚಿವ ಸಂಪುಟ ಪುನರ್‌ರಚನೆ ಹಾಗೂ ವಿಸ್ತರಣೆ ಕುರಿತ ಚರ್ಚೆಗಳು ನಡೆಯುತ್ತಿರುವ ಸಂದರ್ಭದಲ್ಲಿ ಅಲ್ಪಸಂಖ್ಯಾತ ಸಮುದಾಯದ ಪ್ರಮುಖ ಶಾಸಕರಾದ ಜಮೀರ್ ಅಹ್ಮದ್ ಖಾನ್, ಸಲಿಂ ಅಹ್ಮದ್, ತನ್ವೀರ್ ಸೇಠ್ ಹಾಗೂ ಖನೀಜಾ ಫಾತಿಮಾ ಅವರಿಗೆ ಸಚಿವ ಸ್ಥಾನ ನೀಡುವ ಮೂಲಕ ಸಮುದಾಯಕ್ಕೆ ನ್ಯಾಯ ಒದಗಿಸಬೇಕು ಎಂದು ಇಮಾಮಸಾಬ ಮೊರಬದ ಆಗ್ರಹಿಸಿದರು.

ಅದೇ ರೀತಿ, ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ರಹೀಂ ಖಾನ್ ಅವರಿಗೂ ಸಚಿವ ಸ್ಥಾನ ನೀಡಬೇಕು ಎಂಬ ಬೇಡಿಕೆ ರಾಜ್ಯದ ವಿವಿಧ ಭಾಗಗಳಲ್ಲಿ ಕೇಳಿಬರುತ್ತಿದೆ. ದೀರ್ಘಕಾಲದ ರಾಜಕೀಯ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಸಾರ್ವಜನಿಕ ಸೇವೆಯನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡುವುದು ಸೂಕ್ತವಾಗಿರುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಅಲ್ಪಸಂಖ್ಯಾತ ಸಮುದಾಯದ ನಾಯಕರು ಕೇವಲ ಒಂದು ಸಮುದಾಯದ ಪ್ರತಿನಿಧಿಗಳಲ್ಲ, ಅವರು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಜನನಾಯಕರು. ಹೀಗಾಗಿ ಸಚಿವ ಸಂಪುಟದಲ್ಲಿ ಅವರ ಪಾಲ್ಗೊಳ್ಳುವಿಕೆ ಹೆಚ್ಚಿದಷ್ಟೂ ಆಡಳಿತ ವ್ಯವಸ್ಥೆಯಲ್ಲಿ ಸಮತೋಲನ ಹಾಗೂ ಸಾಮಾಜಿಕ ನ್ಯಾಯದ ಮೌಲ್ಯಗಳು ಮತ್ತಷ್ಟು ಬಲಗೊಳ್ಳಲಿವೆ ಎಂದು ಅವರು ಹೇಳಿದರು.

ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್ ರಾಜ್ಯದ ಜನರ ಆಶೋತ್ತರಗಳನ್ನು ಗೌರವಿಸಿ ಅಲ್ಪಸಂಖ್ಯಾತ ಸಮುದಾಯದ ಶಾಸಕರಿಗೆ ನ್ಯಾಯಯುತ ಪ್ರಾತಿನಿಧ್ಯ ನೀಡುವ ವಿಶ್ವಾಸವಿದೆ ಎಂದು ಇಮಾಮಸಾಬ ಮೊರಬದ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಕ್ರಾಂತಿಸೂರ್ಯ ಜೈಭೀಮ್ ಸೇನೆ ಅಲ್ಪಸಂಖ್ಯಾತರ ಘಟಕದ ಪದಾಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಸಹ ಅಲ್ಪಸಂಖ್ಯಾತ ಸಮುದಾಯಕ್ಕೆ ಸಚಿವ ಸಂಪುಟದಲ್ಲಿ ಹೆಚ್ಚಿನ ಅವಕಾಶ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ರಾಜ್ಯದ ಸರ್ವಾಂಗೀಣ ಅಭಿವೃದ್ಧಿ ಮತ್ತು ಸಾಮಾಜಿಕ ಸಾಮರಸ್ಯದ ದೃಷ್ಟಿಯಿಂದ ಈ ಬೇಡಿಕೆಯನ್ನು ಸರ್ಕಾರ ಸಕಾರಾತ್ಮಕವಾಗಿ ಪರಿಗಣಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

Post a Comment

Previous Post Next Post
Loading...

Breaking News

ಭ್ರಷ್ಟರ ಬೇಟೆ
ಜಿಲ್ಲಾ ಸುದ್ದಿ is loading...